ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಭಾಗವಹಿಸಿದ್ದ ಸಚಿವರು, ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ, ಕೆಲಸ ಮಾಡಿಕೊಟ್ಟ ಅಧಿಕಾರಿಗೆ ಧರ್ಮವಾಗಿ ಕೊಡೋದು ಧರ್ಮ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಚಿವರ ಈ ಮಾತಿಗೆ ಸಭೆಯಲ್ಲಿದ್ದ ಸಾರ್ವಜನಿಕರೊಬ್ಬರು ತಕ್ಷಣವೇ ಆಕ್ಷೇಪ ವ್ಯಕ್ತಪಡಿಸಿ, ಕೊಡೋದು ಧರ್ಮ ಅಂದ್ರೆ ಲಂಚ ಕೊಡೋದಾ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾರ್ವಜನಿಕರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಶಿವಲಿಂಗೇಗೌಡರು ತಕ್ಷಣವೇ ಮಾತು ಬದಲಿಸಿ, ನಾನು ಹೇಳಿದ್ದು ಕೆಲಸ ಮಾಡಿಕೊಟ್ಟವರಿಗೆ ಗೌರವ ಕೊಡಿ ಎಂದಷ್ಟೇ ಎಂದು ಸಮಜಾಯಿಷಿ ನೀಡಿದರು. ಇನ್ನು ಇದೇ ವೇಳೆ ಜಾಯಿಂಟ್ ಸರ್ವೆ ನಡೆಸದೆ ಬೇಕಾಬಿಟ್ಟಿ ಕೆಲಸ ಮಾಡುತ್ತಿರುವ ಅರಣ್ಯ ಹಾಗೂ ಇಲಾಖಾ ಅಧಿಕಾರಿಗಳನ್ನು ಸಚಿವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಜನರ ಸೇವೆಗಾಗಿ ಇರುವ ಸರ್ಕಾರದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಮಾತನಾಡಿದ ಸಚಿವರು, ಕಸ್ತೂರಿ ರಂಗನ್ ವರದಿಯಿಂದ ಸಕಲೇಶಪುರ ಮತ್ತು ಆಲೂರು ತಾಲ್ಲೂಕಿನ ಜನರಿಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಮುಖ್ಯಮಂಡಳಿಯವರು ನಾಳೆ ಸ್ವತಃ ಸಕಲೇಶಪುರಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು. ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಸ್ಯೆಗಳು ಮತ್ತು ಜನರ ಆತಂಕದ ಕುರಿತು ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಮಲೆನಾಡಿನಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿರುವುದರ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಸಚಿವರು, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಮೊದಲ ಕರ್ತವ್ಯ ಎಂದರು. ಒಟ್ಟಿನಲ್ಲಿ ಸಚಿವ ಶಿವಲಿಂಗೇಗೌಡರ ಧರ್ಮದ ಬಗೆಗಿನ ಹೇಳಿಕೆ ಹಾಗೂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.




