Rain Alert: ರಾಜ್ಯದಲ್ಲಿ ಮಳೆಗಾಲ ಮುಂದುವರಿದಿದ್ದರೂ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 15ರಿಂದ 20ರವರೆಗೆ ರಾಜ್ಯದ ಬಹುತೇಕ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ವರದಿ ನಿರಾಸೆ ಮೂಡಿಸಿದೆ.
ವಿಜಯಪುರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ದಾವಣಗೆರೆ, ರಾಮನಗರ ಹಾಗೂ ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಲಿದೆ. ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಇನ್ನೊಂದೆಡೆ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿ ಹಾಗೂ ಆರ್ದ್ರ ವಾತಾವರಣ ಇರಲಿದ್ದು, ಮಳೆಗಾಲದಲ್ಲೇ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ಭಾರಿ ಮಳೆಯ ಮುನ್ಸೂಚನೆ ಇಲ್ಲ.
ಇದೇ ವೇಳೆ, ಜುಲೈ 15ರಿಂದ 20ರವರೆಗೆ ರಾಜ್ಯದ ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮುಂದಿನ ಐದು ದಿನಗಳ ಕಾಲ ಮಳೆಯ ಸಾಧ್ಯತೆ ತೀರಾ ಕಡಿಮೆಯಿದ್ದು, ಗರಿಷ್ಠ ತಾಪಮಾನ 32ರಿಂದ 33 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆ ಇದೆ. ಜುಲೈ 15ರಿಂದ 18ರವರೆಗೆ ಬಲವಾದ ಗಾಳಿಯೂ ಬೀಸುವ ಮುನ್ಸೂಚನೆ ಇರುವುದರಿಂದ ವಾಹನ ಸವಾರರು, ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.




