ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತರಾದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತಿರುವ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಬಂದು ಸೇರಿರುವ ಕೋಟ್ಯಂತರ ರೂಪಾಯಿ ಹಣವನ್ನು ವಾಪಸ್ ಪಡೆಯುವಂತೆ ಹಾಗೂ ಅರ್ಹ ಕುಟುಂಬಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್. ಅರುಣ್ಕುಮಾರ್, ಜಿಲ್ಲೆಯಲ್ಲಿ ಬರೋಬ್ಬರಿ 15,724 ಗೃಹಲಕ್ಷ್ಮಿ ಫಲಾನುಭವಿಗಳು ಮೃತರಾಗಿದ್ದಾರೆ ಎಂದು ತಿಳಿಸಿದರು. ಆ ಕುಟುಂಬಗಳಲ್ಲಿ ಬೇರೆ ಅರ್ಹ ಫಲಾನುಭವಿಗಳಿದ್ದಲ್ಲಿ ಅವರಿಗೆ ಆರ್ಥಿಕ ನೆರವು ದೊರೆಯುವಂತೆ ಮಾಡಬೇಕು, ಇಲ್ಲವಾದಲ್ಲಿ ಕೂಡಲೇ ಸೌಲಭ್ಯ ತಡೆಹಿಡಿಯಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್, ಫಲಾನುಭವಿಗಳು ಮೃತಪಟ್ಟ ನಂತರವೂ ಅವರ ಖಾತೆಗೆ ಒಟ್ಟು 2.16 ಕೋಟಿ ರೂಪಾಯಿ ಜಮೆಯಾಗಿದೆ ಎಂದರು. ತಕ್ಷಣವೇ ಮೃತರ ಬ್ಯಾಂಕ್ ಖಾತೆಗಳ ವಹಿವಾಟು ಸ್ಥಗಿತಗೊಳಿಸಿ ಆ ಹಣವನ್ನು ಹಿಂಪಡೆಯುವಂತೆ ಅವರು ನಿರ್ದೇಶನ ನೀಡಿದರು.
ಜನನ ಹಾಗೂ ಮರಣದ ವಿವರಗಳು 21 ದಿನದೊಳಗೆ ‘ಕುಟುಂಬ’ ಆ್ಯಪ್ನಲ್ಲಿ ದಾಖಲಾಗುವುದರಿಂದ, ಫಲಾನುಭವಿಗಳು ನಿಧನರಾದ ಕೂಡಲೇ ಗೃಹಲಕ್ಷ್ಮಿ ಸೌಲಭ್ಯವನ್ನು ಸ್ಥಗಿತಗೊಳಿಸಬೇಕು ಎಂದು ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಭಿಪ್ರಾಯಪಟ್ಟರು. ಅಲ್ಲದೆ, ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು ಎಂದು ಉಪಾಧ್ಯಕ್ಷ ಹುಣಸೂರು ಬಸವಣ್ಣ ತಾಕೀತು ಮಾಡಿದರು.
ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಲು ನಿರ್ಧರಿಸಲಾಗಿದೆ.
