Wednesday, October 22, 2025

Latest Posts

ಕರ್ನಾಟಕ ರೈತರಿಗೆ ನವರಾತ್ರಿ ಕೊಡುಗೆ : 5 ಧಾನ್ಯಗಳ ಖರೀದಿಗೆ ಅನುಮತಿ!

- Advertisement -

ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್ ಮತ್ತು ಸೂರ್ಯಕಾಂತಿ ಬೆಳೆಗಳನ್ನು ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಈ ಸಂಬಂಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಹ್ಲಾದ್ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಮುಂಗಾರಿನಲ್ಲಿ ಅತಿವೃಷ್ಟಿಯಿಂದಾಗಿ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ನೆರವಿಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕ್ರಮ ಕೈಗೊಳ್ಳುವಂತೆ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ತಕ್ಷಣವೇ ಕ್ರಮಕೈಗೊಳ್ಳಲು ಸೂಚಿಸಿದ್ದು, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ತ್ವರಿತವಾಗಿ ನಿರ್ಧಾರ ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರದ ಅನುಮತಿಯಂತೆ, ಕರ್ನಾಟಕದಿಂದ 38,000 ಮೆಟ್ರಿಕ್ ಟನ್ ಹೆಸರು, 60,810 ಮೆಟ್ರಿಕ್ ಟನ್ ಉದ್ದು, 15,650 ಮೆಟ್ರಿಕ್ ಟನ್ ಸೂರ್ಯಕಾಂತಿ, 61,148 ಮೆಟ್ರಿಕ್ ಟನ್ ಶೇಂಗಾ ಮತ್ತು 1,15,000 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ರೈತರಿಗೆ ಈ ನೆರವು ಶೀಘ್ರದಲ್ಲೇ ತಲುಪುವಂತೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯುವ ಮೂಲಕ ಧಾನ್ಯ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಸೂಚಿಸಲಾಗಿದೆ. ರೈತರ ಸಂಕಷ್ಟ ಅರಿತು ನೆರವಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss