ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.
ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ ಆಯೋಜಿಸಲಾಗಿತ್ತು. ದೇಶದಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಹುಬ್ಬಳ್ಳಿಯಲ್ಲೂ ಕಾರ್ಯಕ್ರಮ ಆರಂಭವಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಇಲಾಖೆಗಳ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಪೋಸ್ಟಲ್, ರೈಲ್ವೆ, ಬ್ಯಾಂಕಿಂಗ್ ಮತ್ತು ಸೆಂಟ್ರಲ್ ಯುನಿವರ್ಸಿಟಿ ಸೇರಿದಂತೆ ಹಲವು ಕೇಂದ್ರ ಇಲಾಖೆಗಳ 151ಕ್ಕೂ ಹೆಚ್ಚು ಅಭ್ಯರ್ಥಿಗಳು ನೇಮಕಾತಿ ಪತ್ರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ವಿಭಾಗದ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಕುಟುಂಬ ಸದಸ್ಯರು ಭಾಗವಹಿಸಿದ್ದರು.




