ಬಡವರಿಗೆ ನಿವೇಶನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕಂದಾಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಿವೇಶನಕ್ಕಾಗಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ಈ ತಿಂಗಳಾಂತ್ಯದ ವೇಳೆಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.
ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಇನ್ನೂ ಆಗಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬೇಡಿ ಎಂದಿರುವ ಅವರು, ಅಗತ್ಯವಿದ್ದಲ್ಲಿ ಹಿರಿಯ ಅಧಿಕಾರಿಗಳಿಂದ ತಾಂತ್ರಿಕ ಸಹಕಾರ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ಕನಸಿನ ಯೋಜನೆಯಾದ ‘ಭಾರತ್ ಜೋಡೋ ಯುವ ಸಂಘ’ದ ನೋಂದಣಿ ಕಾರ್ಯವನ್ನು ತೀವ್ರಗೊಳಿಸುವಂತೆ ಸೂಚಿಸಿದರು. ಸಂಘಗಳ ನೋಂದಣಿ ಮತ್ತು ಮೆಂಟರ್ಸ್ಗಳ ನೇಮಕ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದ ಅವರು, ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಈ ಕಾರ್ಯಕ್ರಮದಿಂದ ಸರ್ಕಾರ ಹಾಗೂ ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದು ಅಭಿಪ್ರಾಯಪಟ್ಟರು.
ಪ್ರಜಾಸೇವಾ ಅಭಿಯಾನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚಾಗಿ ಬರುತ್ತಿದ್ದು, ಪಹಣಿ ತಿದ್ದುಪಡಿ, ಪೋಡಿ ಹಾಗೂ ಪಿಂಚಣಿ ಸಮಸ್ಯೆಗಳಂತಹ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ. ಆರ್.ಟಿ.ಸಿ ಮತ್ತು ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದ್ದು, ಯಾವುದೇ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಪಡೆದು ಕೂಡಲೇ ಪರಿಹರಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.




