ರಾಜಕೀಯ ತಿರುವು ಪಡೆದ ಮಂಜುಳಾ ಆತ್ಮಹತ್ಯೆ ಕೇಸ್!

ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ.

ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ, ಬಿಜೆಪಿ ಮುಖಂಡ ಹಾಗೂ ಸೊರಬ ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿ ಅವರನ್ನು ವಿವಾಹವಾಗಿದ್ದರು. ಪ್ರಭು ಮೇಸ್ತ್ರಿ ಮಂಜುಳಾ ಅವರ ಜೊತೆ ಎರಡನೇ ಮದುವೆಯಾಗಿದ್ದರು. ಮದುವೆಯ ನಂತರ ಸೊರಬದಲ್ಲಿ ವಾಸವಾಗಿದ್ದರು.

ಮೃತಳ ಕುಟುಂಬಸ್ಥರ ಆರೋಪದ ಪ್ರಕಾರ, ಗಂಡನ ಕಿರುಕುಳಕ್ಕೆ ಬೇಸತ್ತು ಮಂಜುಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲದೇ ಪ್ರಭು ಮೇಸ್ತ್ರಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರು ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ವಿಚಾರವಾಗಿ ಮನೆಯಲ್ಲಿ ಆಗಾಗ ಕಲಹಗಳು ನಡೆಯುತ್ತಿದ್ದವು ಎನ್ನುವ ಮಾಹಿತಿ ಹೊರಬಿದ್ದಿದೆ.

ಮೃತ ಮಂಜುಳಾ ಅವರ ತಾಯಿ ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಭು ಮೇಸ್ತ್ರಿ ಅವರನ್ನು ಬಂಧಿಸಿದ್ದಾರೆ. ನಂತರ ಕೋರ್ಟ್‌ಗೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ. ಮಂಜುಳಾ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಲೇ ಬಹಿರಂಗವಾಗಬೇಕಿದೆ.

About The Author