Tuesday, November 18, 2025

Latest Posts

Political News: ಮೇಕೆದಾಟು ಜಾರಿಗೆ ಮುಂದಾಗಿ : ದಿಲ್ಲೀಲಿ ಯಾರ್ಯಾರನ್ನು ಭೇಟಿಯಾದ್ರು ಸಿಎಂ..?

- Advertisement -

Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್‌ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ.

ಇನ್ನೂ ಇದೇ ವೇಳೆ ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ರಾಹುಲ್‌ ಗಾಂಧಿವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ಅಲ್ಲದೆ ಸಂಬಂಧಿತ ಸಂಸ್ಥೆಗಳಿಂದ ಶೇಕಡಾ 5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೂವರು ಸಚಿವರ ನೇತೃತ್ವದಲ್ಲಿ ನಡೆದ ಸಭೆಗೆ ಆಗಮಿಸಲು ರಾಜ್ಯದ ಗಿಗ್ ಕಾರ್ಮಿಕರ ವಲಯದ ಪರವಾಗಿ ಮೂವರು ಕಾರ್ಯಕರ್ತರಿಗೂ ಅವಕಾಶ ಒದಗಿಸಲಾಗಿತ್ತು.

ದೆಹಲಿಯಲ್ಲಿ ರಾಹುಲ್‌ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದಾರೆ.

ಮೇಕೆದಾಟು ಅನುಷ್ಠಾನಕ್ಕೆ ಗಮನಹರಿಸಿ..

ಇನ್ನೂ ಇದಕ್ಕೂ ಮುನ್ನ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ ಅಥವಾ ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ. ಅಲ್ಲದೆ ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ ಹಾಗೂ ಪ್ರಸ್ತಾವನೆಗಳಿಗೆ ಅನುಮತಿ ಅಂದರೆ ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

- Advertisement -

Latest Posts

Don't Miss