Saturday, April 19, 2025

Latest Posts

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

- Advertisement -

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ.

ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಗೆ ಸಂಬಂಧಿಸಿದ ಯಾವುದೇ ಆದೇಶವನ್ನು ಸದ್ಯದಲ್ಲಿ ನೀಡಲಾಗುವುದಿಲ್ಲ. ತನಿಖೆ ಮುಂದುವರೆಸಿ ಅಂತಿಮ ವರದಿ ಸಲ್ಲಿಕೆಯ ಬಳಿಕವೇ ತಕರಾರು ಅರ್ಜಿಯ ಬಗ್ಗೆ ತೀರ್ಪನ್ನು ನೀಡಲಾಗುವುದು ಎಂದು ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಆದೇಶಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಬಿ ರಿಪೋರ್ಟ್‌ಗೆ ಸಂಬಂಧಿಸಿದ ಯಾವುದೇ ಆದೇಶ ಹೊರಬೀಳದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಚ ನಿರಾಳರಾಗಿದ್ದರೂ ಸಹ ತನಿಖೆಯನ್ನು ಮುಂದುವರೆಸಬೇಕು ಎಂಬ ಲೋಕಾಯುಕ್ತ ಪೊಲೀಸರ ವಾದದ ಹಿನ್ನೆಲೆ ಪ್ರಕರಣದಲ್ಲಿ ಹಿನ್ನಡೆಯಾಗಿದೆ.

ಅಲ್ಲದೆ ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ನ್ಯಾಯಾಲಯವು ಅಂಗೀಕಾರ ಮಾಡಿದ್ದರೆ ಸಿದ್ದರಾಮಯ್ಯ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಂತಾಗುತ್ತಿತ್ತು. ಆದರೆ ಈ ವಿಚಾರವಾಗಿ ಮೇ 7ರಂದು ತೀರ್ಮಾನಿಸಲಾಗುವುದು ಎಂದು ಹೇಳಿರುವುದರಿಂದ ಅವರಿಗೆ ಇನ್ನಷ್ಟು ಆತಂಕ ಮುಂದುವರೆಯಲಿದೆ. ಇನ್ನೂ ಇದೇ ಪ್ರಕರಣದಲ್ಲಿ ಇಡಿಯನ್ನು ನೊಂದ ವ್ಯಕ್ತಿಯಂತೆ ಕಾಣಿದ್ದು, ಇದರಂತೆಯೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕೇಸ್‌ನಲ್ಲಿ ಇ.ಡಿ.ಯ ಬಿ ರಿಪೋರ್ಟ್‌ ಪ್ರಶ್ನಿಸಲು ನೇರವಾಗಿ ಸಾಧ್ಯವಿಲ್ಲವಾದ್ದರಿಂದ ನೊಂದವರಂತೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯವು ಹೇಳಿದೆ.

ಏನಿದು ಮೂಡಾಯಣ..?

ಇನ್ನೂ ಈ ಮುಡಾ ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ, ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ರಾಜ್ಯಪಾಲರು ಕಳೆದ ಆಗಸ್ಟ್​​​ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆಗಸ್ಟ್​​ 19ರಂದು ಸಲ್ಲಿಸಿದ್ದ ತಕರಾರು ಅರ್ಜಿ ತಿರಸ್ಕರಿಸಿದ್ದ ಹೈಕೋರ್ಟ್, ಸೆಪ್ಟೆಂಬರ್​​ 24ರಂದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ದಾಖಲಾದ ದಿನವೇ ಅಂದರೆ ಸೆಪ್ಟೆಂಬರ್ 27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಅದನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಕ್ರಮ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ಮೈಸೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು.

- Advertisement -

Latest Posts

Don't Miss