Sunday, April 20, 2025

Latest Posts

Political News: ಲಂಚ ನೀಡುವುದು, ಪಡೆಯುವುದು ಅಪರಾಧ: ಸಿದ್ದರಾಮಯ್ಯ

- Advertisement -

Political News: ರಾಜ್ಯ ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಗುತ್ತಿಗೆದಾರರು ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಈ ಹಿಂದಿನ ಸರ್ಕಾರದ ವೇಳೆ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣವನ್ನು ಬಿಡುಗಡೆ ಮಾಡಲು ಯಾರಿಂದಲೂ ಸಹ ದುಡ್ಡು ಪಡೆದಿಲ್ಲವೆಂದು ತಿಳಿಸಿದ್ದಾರೆ. ಅಲ್ಲದೆ ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೆ ಬಾಕಿ ಇರುವ ಬಿಲ್‌ನ ಅರ್ಧದಷ್ಟು ಹಣವನ್ನುಈ ಕೂಡಲೇ ಬಿಡುಗಡೆ ಮಾಡಲು ಈ ಬಜೆಟ್‌ನಲ್ಲಿಯೇ ಅನುದಾನ ಒದಗಿಸುವಂತೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಸಭೆಯಲ್ಲಿ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಪ್ರತಿಯಾಗಿ, ಹಾಗೆಲ್ಲ ಮಾಡಲು ಸಾಧ್ಯವಾಗುವುದಿಲ್ಲ ಹಣಕಾಸಿನ ಸ್ಥಿತಿಯನ್ನು ನೋಡಿ ತೀರ್ಮಾನಿಸಬೇಕಾಗುತ್ತದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಈಗಾಗಲೇ ಉಭಯ ಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಬಳಿಕ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಮಾರ್ಚ್‌ ತಿಂಗಳಲ್ಲಿ 50 ಲಕ್ಷದ ಕಾಮಗಾರಿ ಬಿಲ್‌ ರಿಲೀಸ್..

ಜಲ ಸಂಪನ್ಮೂಲ ಇಲಾಖೆಯಲ್ಲಿ ಕೈಗೊಳ್ಳಲಾಗಿರುವ 50 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳ ಬಿಲ್‌ಗಳನ್ನು ಇದೇ ಮಾರ್ಚ್‌ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು. ಗುತ್ತಿಗೆದಾರರ ಸಂಘದವರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆದಷ್ಟು ಬೇಗನೇ ಬಿಲ್ಲುಗಳನ್ನು ಬಿಡುಗಡೆ ಮಾಡುತ್ತೇವೆ. ಅಲ್ಲದೆ ಜಲ ಸಂಪನ್ಮೂಲ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 4 ನಿಗಮಗಳ ಎಂಡಿಗಳ ಸಭೆ ನಡೆಸುತ್ತೇನೆ. ಅದೇ ಸಭೆಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಚರ್ಚಿಸುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.

- Advertisement -

Latest Posts

Don't Miss