ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದನ್ನು ತೀವ್ರವಾಗಿ ವಿರೋದಿಸಿ, ತಾಲ್ಲೂಕಿಗೆ ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ.25 ರಷ್ಟು ಹುದ್ದೆಗಳಿಗೆ ವರ್ಗಾವಣೆ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಿತ್ತು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಇಲಾಖಾ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಆಧಾರದ ಮೇಲೆ ಶೇಕಡಾವಾರು ಮಿತಿಯನ್ನು ಲೆಕ್ಕಾಚಾರ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಂದರೆ, ಶಿಕ್ಷಕರ ವರ್ಗಾವಣೆ ಮಾಡಬೇಕಾದರೆ, ಆ ತಾಲ್ಲೂಕಿಗೆ ಎಷ್ಟು ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ ಎಂಬುದನ್ನು ಪರಿಗಣಿಸಿ, ಅದರಲ್ಲಿ ಶೇ.25 ರಷ್ಟು ಹುದ್ದೆಗಳಿಗೆ ವರ್ಗಾವಣೆ ಪ್ರಕ್ರಿಯೆ ನಡೆಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ 72000 ಶಿಕ್ಷಕರ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ನ.24 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ, ಸರ್ಕಾರದ ಪರಿಷ್ಕೃತ ಆದೇಶದಿಂದ ವರ್ಗಾವಣೆ ಮಾಡಬಹುದಾದ ಹುದ್ದೆಗಳ ಸಂಖ್ಯೆ ಹೆಚ್ಚಾಗಲಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ಪರಿಷ್ಕೃತ ಆದೇಶ ಹೊರಡಿಸಿ, ವರ್ಗಾವಣೆ ದಿನಾಂಕ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

