www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಅವರಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಇನ್ನು ದೇಶವನ್ನುಮುನ್ನಡೆಸುತ್ತಾರಾ” ಎಂದು ಪ್ರಶ್ನಿಸಿದರು.
“ದೇಶದ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದರೆ ಸಿದ್ದರಾಮಯ್ಯ ಅವರು ಸಾಬ್ರು ಕಾ ಸಾಥ್ ಸಾಬ್ರು ಕಾ ವಿಕಾಸ್ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ” ಎಂದು ನಳಿನ್ ಕುಮಾರ್ ಕಟೀಲ್ ದೂರಿದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮುಂತಾದವರು ಉಪಸ್ಥಿತರಿದ್ದರು.