ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿ ನಮಗೆ ಬೆದರಿಕೆ ಹಾಕುವ ಮೂಲಕ ಮತ್ತು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ. ನಮ್ಮ ಕಚೇರಿಗೆ ಹಾನಿ ಮಾಡಿದಂತೆ ನಾವು ನಿಮ್ಮ ಸರ್ಕಾರವನ್ನು ಕಿತ್ತು ತೆಗೆಯಲು ಹೊರಟಿದ್ದೇವೆ ಎಂದರು. “ಅಯೋಧ್ಯೆಯಲ್ಲಿ ಸೋಲಿಸಿದಂತೆ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರನ್ನು ಸೋಲಿಸುತ್ತೇವೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ ಮತ್ತು ನರೇಂದ್ರ ಮೋದಿಯನ್ನು ಸೋಲಿಸುತ್ತದೆ ಎನ್ನುವುದನ್ನು ಲಿಖಿತವಾಗಿ ಬರೆದುಕೊಳ್ಳಿ, ನಾವು ಒಟ್ಟಾಗಿ ಅವರನ್ನು ಸೋಲಿಸಲಿದ್ದೇವೆ” ಎಂದು ಸವಾಲ್ ಹಾಕಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಒಬ್ಬನೇ ಒಬ್ಬ ಸ್ಥಳೀಯ ವ್ಯಕ್ತಿಯನ್ನು ಆಹ್ವಾನಿಸದಿರುವುದನ್ನು ಕಂಡು ಅಯೋಧ್ಯೆಯ ಜನರು ಆಕ್ರೋಶಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಯೋಧ್ಯೆಯಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಅವರ ಸರ್ವೇಯರ್‌ಗಳು ಹಾಗೆ ಮಾಡದಂತೆ ಸಲಹೆ ನೀಡಿದರು. ಒಂದು ವೇಳೆ ಮೋದಿ ಅಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಅವರು ಸೋಲುತ್ತಿದ್ದರು ಮತ್ತು ಅವರ ರಾಜಕೀಯ ಜೀವನ ಕೊನೆಗೊಳ್ಳುತ್ತಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.