Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಸದ್ಯಕ್ಕೆ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಜುಲೈ 17 ಮತ್ತು 18ರಂದು ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಸೀಮಿತವಾಗಿರಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಮಳೆಯ ನಿರೀಕ್ಷೆಯಿದ್ದು, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯ ಮುನ್ಸೂಚನೆ ಇಲ್ಲ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಇದರ ನಡುವೆ, ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆ, ಮುಂದಿನ ಎರಡು ದಿನ ರಾಜ್ಯದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಷ್ಟೇ ನಿರೀಕ್ಷೆಯಿದ್ದು, ವ್ಯಾಪಕ ಮಳೆಯ ನಿರೀಕ್ಷೆ ಇನ್ನೂ ದೂರವೇ ಉಳಿದಿದೆ.




