Rain Alert: ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, ಬರದ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಹವಾಮಾನ ಇಲಾಖೆ ರೈತರಿಗೆ ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಜುಲೈ 20 ರಿಂದ 23ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಮತ್ತು ಮಲೆನಾಡಿನ ಕೆಲ ಭಾಗಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರದಲ್ಲಿ ಬಿರುಗಾಳಿ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೆ, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇತ್ತ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.




