ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಅನ್ನೋದನ್ನ ನೋಡೋದಾದ್ರೆ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರು ಸಹ ಯೆಲ್ಲೋ ಅಲರ್ಟ್‌ನ ವ್ಯಾಪ್ತಿಯಲ್ಲಿದ್ದು, ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಳೆದ ರಾತ್ರಿ ನಗರದಲ್ಲಿ ಸಂಭವಿಸಿದ ಮಳೆ ಹಲವು ರಸ್ತೆಗಳ ಮೇಲೆ ನೀರು ನಿಂತ ಸ್ಥಿತಿಯನ್ನು ಉಂಟುಮಾಡಿದ್ದು, ಇಂದು ಬೆಳಗ್ಗೆ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರದ ಗರಿಷ್ಠ ತಾಪಮಾನ ಸುಮಾರು 26 ಡಿಗ್ರಿ ಸೆಲ್ಸಿಯಸ್, ಹಾಗೂ ಕನಿಷ್ಠ ತಾಪಮಾನ 22-24 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಅಲ್ಲಿನ ಜನತೆ ಎಚ್ಚರಿಕೆಯಿಂದ ಇರುವುದು ಅಗತ್ಯ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ರೈತರು, ಪ್ರಯಾಣಿಕರು ಹಾಗೂ ನಾಗರಿಕರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ವರದಿ : ಲಾವಣ್ಯ ಅನಿಗೋಳ