ಕುಷ್ಟಗಿ ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದ್ದು, ಅಂಗಡಿ ಮಾಲೀಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸರ್ಕಾರದ ನಿಯಮದ ಪ್ರಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಮೇ ಮತ್ತು ಜೂನ್ ತಿಂಗಳ ಒಟ್ಟು 70 ಕೆಜಿ ಅಕ್ಕಿ ನೀಡಬೇಕಿತ್ತು. ಆದರೆ, ಗ್ರಾಮದ ಹಲವರಿಗೆ ಕೇವಲ 35 ರಿಂದ 50 ಕೆಜಿ ಅಕ್ಕಿ ಮಾತ್ರ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 150ಕ್ಕೂ ಹೆಚ್ಚು ಫಲಾನುಭವಿಗಳು ಮೋಸಕ್ಕೊಳಗಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇನ್ನೂ, ಮೃತಪಟ್ಟವರ ಹೆಸರಿನಲ್ಲಿ ಬಂದ ಪಡಿತರವನ್ನು ಕುಟುಂಬಸ್ಥರಿಗೆ ನೀಡದೆ ದುರ್ಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಜೊತೆಗೆ, ನ್ಯಾಯಬೆಲೆ ಅಂಗಡಿ ನಿಗದಿತ ಸಮಯಕ್ಕೆ ತೆರೆಯದೇ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಶ್ನಿಸಿದಾಗ ಹಂಚಿಕೆದಾರರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕರವೇ ಗ್ರಾಮ ಘಟಕದ ಅಧ್ಯಕ್ಷ ಯಮನೂರಪ್ಪ ಬನ್ನಿಗೋಳ ಆರೋಪಿಸಿದ್ದಾರೆ.
ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಪಡಿತರ ವಿತರಣೆಯಲ್ಲಿ ಲೋಪ ಕಂಡುಬಂದಿರುವುದಾಗಿ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡುವ ಕುರಿತು ಸರ್ಕಾರಕ್ಕೆ ವರದಿ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.




