ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಅಂತ ಸ್ಪಷ್ಟವಾಗಿ ಹೇಳಿದ್ದಾರೆ.
ಎಸ್ ‘ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ಹಿರಿಯ ನಾಯಕರು ಕೂಡ ಸಿಎಂ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ತಮ್ಮ ಆಸೆ ಅಥವಾ ಭಾವನೆಗಳನ್ನು ವ್ಯಕ್ತಪಡಿಸುವುದು ತಪ್ಪಲ್ಲ ಎಂದಿದ್ದಾರೆ. ಆದರೂ ಕೂಡ, 2028ಕ್ಕೆ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ನಿಶ್ಚಿತ ಅಂತ ತಂಗಡಗಿ ಭವಿಷ್ಯ ನುಡಿದ್ದಾರೆ.
ಇದೇ ವೇಳೆ ಜಿಲ್ಲೆಯ ರಾಜಕೀಯದ ಬಗ್ಗೆಯೂ ಮಾತನಾಡಿದ ಅವರು, ಶಾಸಕ ರಾಘವೇಂದ್ರ ಹಿಟ್ನಾಳ್ ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರು ಖಂಡಿತ ಸಚಿವರಾಗಲಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ಮುನಿಸುಗಳಿಲ್ಲ, ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ ಅಂತ ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಚಿವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದ್ದ ಬಿಜೆಪಿಯವರೇ ಈಗ ಬೇರೆ ರಾಜ್ಯಗಳಲ್ಲಿ ಅದೇ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ಅವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವುದೇ ನೈತಿಕತೆಯಿಲ್ಲ ಅಂತ ತಿರುಗೇಟು ನೀಡಿದರು. ಅಲ್ಲದೆ, ಬಿಜೆಪಿಯಲ್ಲಿ ಆರ್. ಅಶೋಕ್ ಅವರನ್ನು ಕಂಡರೆ ಸುನೀಲ್ ಕುಮಾರ್‌ಗೆ ಆಗಲ್ಲ, ಸುನೀಲ್ ಕಂಡರೆ ಸಿ.ಟಿ. ರವಿಗೆ ಆಗಲ್ಲ. ಮೊದಲು ತಮ್ಮ ಪಕ್ಷದೊಳಗಿನ ಬೂದಿ ಮುಚ್ಚಿದ ಕೆಂಡದಂತಹ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ ಅಂತ ಬಿಜೆಪಿ ನಾಯಕರಿಗೆ ಸಕತ್ ಟಾಂಗ್ ಕೊಟ್ಟಿದ್ದಾರೆ.
ಒಟ್ಟಿನಲ್ಲಿ ಸಚಿವ ಶಿವರಾಜ್ ತಂಗಡಗಿ ಅವರ ಈ ಹೇಳಿಕೆ ಈಗ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ! ಜೊತೆಗೆ ಮುಂಬರುವ ದಿನಗಳಲ್ಲಿ ಈ ಬಗ್ಗೆ ಮತ್ತಷ್ಟು ರಾಜಕೀಯ ತಿರುವುಗಳು ಸಿಗೋದಂತೂ ಪಕ್ಕಾ ಅಂತ ಹೇಳಬಹುದು!




