ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 8 ಮಂದಿ ಸೇರಿದಂತೆ ದೇಶಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಇಂತಹ ಹುತಾತ್ಮರನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು, 116 ಹುತಾತ್ಮರ ಕುಟುಂಬ ಸದಸ್ಯರಿಗೆ ಅನುಕಂಪದ ನೇಮಕಾತಿ ನೀಡಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ ಎಂದರು.
ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಿವೃತ್ತ ಪೊಲೀಸ್ ಅಧಿಕಾರಿಗಳ ಆರೋಗ್ಯ ಯೋಜನೆಯಡಿ ವೈದ್ಯಕೀಯ ಮರುಪಾವತಿ ಮಿತಿ 1 ಲಕ್ಷದಿಂದ 1.5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಎಲ್ಲಾ ಪೊಲೀಸ್ ಸಿಬ್ಬಂದಿಯ ವಾರ್ಷಿಕ ಆರೋಗ್ಯ ತಪಾಸಣಾ ವೆಚ್ಚವನ್ನು 1000ರಿಂದ 1500ಕ್ಕೆ ಹೆಚ್ಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಸಂವಿಧಾನ ವಿರೋಧಿ ಹಾಗೂ ಅನೈತಿಕ ಪೊಲೀಸ್ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದ್ದು, ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಮಾದಕ ವಸ್ತುಗಳ ಹಾವಳಿಗೂ ಬ್ರೇಕ್ ಬಿದ್ದಿದೆ, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ ಎಂದರು.
ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗಟ್ಟಲು DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಲಾಗಿದೆ ಎಂದು ಹೇಳಿದರು. ಈ ಠಾಣೆಗಳು ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದರು. ದೇಶದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿ ಅಗ್ರಗಣ್ಯರು. ಕೋಮು ಹಾಗೂ ದುಷ್ಟ ಶಕ್ತಿಗಳ ನಿಯಂತ್ರಣದಲ್ಲಿಯೂ ನಿಮ್ಮ ಪಾತ್ರ ಅಸಾಧಾರಣವಾಗಿದೆ. ಸಂವಿಧಾನ ನೀಡಿದ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ನೀವು ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯ ಪ್ರಶಂಸಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

