ಬೆಳಗಾವಿ: ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ಆಗಸ್ಟ್ 3ರಂದು ನಡೆಯಲಿರುವ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ದ ಕುರಿತು ಇಂದು ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ಚಿಂತನ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸುದ್ದಿಗಾರರಿಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿದೆ. ಆದರೆ, ನಮಗೆ ಎಲ್ಲಕ್ಕಿಂತ ಮೊದಲು ಪಕ್ಷ ಮುಖ್ಯ. ನಾವೆಲ್ಲರೂ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಾಗಿ ನಾಡಿನ ಜನರ ಸೇವೆ ಮಾಡುತ್ತಿದ್ದೇವೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬ ಆಚರಿಸುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಅಪಾರ ಅನುಭವ ಮತ್ತು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಮನೋಭಾವ, ನಿಸ್ವಾರ್ಥ ಜನಸೇವೆಯ ಗುರಿ ಹೊಂದಿರುವ ಶ್ರೀ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಕೊಟ್ಟಿರುವ ಅನುದಾನಗಳು ಮತ್ತು ಸೌಕರ್ಯಗಳನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗಾಗಿ, ಅವರ ಜನ್ಮದಿನೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂಬುದು ನನ್ನ ಆಶಯ. ಅದಕ್ಕಾಗಿ 5 ದಿನಗಳ ಕಾಲ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಕುರಿತು ಸಭೆ ನಡೆಸಲಿದ್ದೇನೆ ಎಂದು ಶಾಸಕರಾದ ಜಮೀರ್ ಅಹ್ಮದ್ ವಿವರಿಸಿದರು.
ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.
ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.




