ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದ್ದು, ಅದರಂತೆ ಸಿದ್ದು ಸಂಜೆ 7 ಗಂಟೆಗೆ ವಿಮಾನ ಹತ್ತಲಿದ್ದಾರೆ.
ಸಭೆಯ ವೇಳಾಪಟ್ಟಿ ಪ್ರಕಾರ ಶನಿವಾರ ಬೆಳಗ್ಗೆ 10.30ಕ್ಕೆ ಇಂದಿರಾ ಭವನದಲ್ಲಿ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಖರ್ಗೆ ಸೇರಿದಂತೆ ಕರ್ನಾಟಕದಿಂದ ಒಟ್ಟು ಐದು ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಹೈಕಮಾಂಡ್ ಜೊತೆ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆ ಇದೆ. ಸಭೆ ಬಳಿಕ ಕೇಂದ್ರ ಮಂತ್ರಿಗಳೊಂದಿಗೆ ಮುನ್ನ ನಿಗದಿತ ಭೇಟಿಗಳೂ ಇರುವುದಾಗಿ ಮೂಲಗಳು ತಿಳಿಸಿವೆ. ಅದೇ ದಿನ ಸಂಜೆ 4.30ಕ್ಕೆ ಅವರು ಬೆಂಗಳೂರಿಗೆ ಮರುಪ್ರಯಾಣ ಮಾಡಲಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿಲ್ಲ. ಉಳಿದಂತೆ ರಾಜ್ಯದಿಂದ CWC ಸದಸ್ಯರಾದ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.




