ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಯೂ ನೆರವೇರಲಿದೆ. ವ್ಯವಸ್ಥಿತವಾಗಿ ಸಮಾವೇಶ ನಡೆಯುವಂತೆ ನೋಡಿಕೊಳ್ಳಬೇಕು. ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಸಹಕಾರ ನೀಡಬೇಕು. ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು ಎಂದು ಸೂಚಿನೆ ನೀಡಿದ್ದಾರೆ.
ಇನ್ನು ಸಾವಿರಾರು ಸಂಖ್ಯೆಯಲ್ಲಿ ಬರುವ ಸಾರ್ವಜನಿಕರಿಗೆ ಯಾವುದೇ ಕಿರಿಕಿರಿ ಉಂಟಾಗದಂತೆ ನೋಡಿಕೊಳ್ಳಬೇಕು. ಇದು ಸರ್ಕಾರದ ಬೃಹತ್ ಸಮಾರಂಭವಾಗಿದ್ದು, ಪಾಲ್ಗೊಳ್ಳುವ ಎಲ್ಲರಿಗೂ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಕೊರತೆ-ಗೊಂದಲ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ