ಶಾಲೆಯಲ್ಲೇ ವಿದ್ಯಾರ್ಥಿಗಳ ಮಧ್ಯೆ ನಡೆದ ಜಗಳ ಭೀಕರ ಅಂತ್ಯ ಕಂಡಿದ್ದು, ಸಹಪಾಠಿಯಿಂದ ಚಾಕು ಇರಿತಕ್ಕೊಳಗಾದ 10ನೇ ತರಗತಿಯ ನಯರ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಮಂಗಳವಾರ ಅಹಮದಾಬಾದ್‌ನ ಖಾಸಗಿ ಶಾಲೆಯೊಂದ್ರಲ್ಲಿ, ಈ ದಾರುಣ ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಜಗಳದ ವೇಳೆ 10ನೇ ತರಗತಿಯ ಹಿರಿಯ ವಿದ್ಯಾರ್ಥಿಗೆ ಚಾಕು ಇರಿದಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಈ ಘಟನೆ ತಿಳಿದು ಬಾಲಕನ ಕುಟುಂಬಸ್ಥರು, ಸಿಂಧಿ ಸಮುದಾಯದ ಸದಸ್ಯರು ಹಾಗೂ ಅನೇಕ ಪೋಷಕರು ಶಾಲೆಯ ಮುಂದೆ ಭಾರೀ ಪ್ರತಿಭಟನೆ ನಡೆಸಿದರು.
ಸಾವನ್ನಪ್ಪಿದ್ದ ಬಾಲಕ ಹಿಂದೂ ಧರ್ಮದವನಾಗಿದ್ದು, ಹಲ್ಲೆ ಮಾಡಿದ ವಿದ್ಯಾರ್ಥಿ ಮುಸ್ಲಿಮ್ ಸಮುದಾಯಕ್ಕೆ ಸೇರಿದವನು. ಈ ವಿಚಾರ ಗೊತ್ತಾಗುತ್ತಿದ್ದಂತೆ, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪ್ರತಿಭಟನಾಕಾರರು ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕೆಲ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಜಂಟಿ ಪೊಲೀಸ್ ಆಯುಕ್ತ ಜೈಪಾಲ್ ಸಿಂಗ್ ರಾಥೋಡ್ ಮಾತನಾಡಿ, ಎಫ್‌ಐಆರ್ ದಾಖಲಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಆರೋಪಿ ಸದ್ಯ, ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೀತಿದೆ.




