ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.
ಪ್ರಕರಣವನ್ನು ಖಂಡಿಸಿ ರಾಜ್ಯ ಕಾರ್ಯದರ್ಶಿ ಮತ್ತು ಸಚಿವಾಲಯಗಳಿರುವ ನಬಣ್ಣ ಭವನಕ್ಕೆ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಮೆರವಣಿಗೆ ಮಾಡಲು ನಿರ್ಧರಿಸಿದ್ದರು. ಆದ್ರೆ, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಶೆಲ್ಗಳು ಮತ್ತು ಜಲಫಿರಂಗಿಗಳನ್ನು ಬಳಸಿದ್ದು ಸರ್ಕಾರ ವಿರುದ್ಧ ಆಕ್ರೋಶ ಹುಟ್ಟುವಂತೆ ಮಾಡಿದೆ. ಕೆಲ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.



