2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ.
ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರ ಪೀಠವು ಸೋಮವಾರ ಡಿ. 8ರಂದು ವಿಚಾರಣೆ ನಡೆಸಿದೆ.
ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಿಯಾಂಕ್ ಅವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021ರ ಪ್ರಮಾಣ ಪತ್ರವಾಗಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಇದಲ್ಲದೆ, ಕಾಂಗ್ರೆಸ್‌ನಿಂದ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮ ಎಂದು ದೂರಿದ್ದಾರೆ. ಈ ಪ್ರಕರಣದ ಮೇಲೆ ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯಲ್ಲಿ ಎರಡೂ ಪಕ್ಷಗಳ ವಾದಗಳನ್ನು ಆಲಿಸಲಿದೆ.
ವರದಿ : ಲಾವಣ್ಯ ಅನಿಗೋಳ



