ವಿದ್ಯಾರ್ಥಿನಿಯರ ಮುಟ್ಟಿನ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಅವಿಭಾಜ್ಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರುವುದನ್ನು ರಾಜ್ಯ ಸರ್ಕಾರಗಳು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶಿಸಿದೆ. ಜೊತೆಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿಶೇಷಚೇತನ ಸ್ನೇಹಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದೆ.
ಈ ಸೌಲಭ್ಯಗಳನ್ನು ಒದಗಿಸಲು ವಿಫಲವಾದ ಖಾಸಗಿ ಶಾಲೆಗಳ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ನ್ಯಾಯಪೀಠ ಕಠಿಣ ಎಚ್ಚರಿಕೆ ನೀಡಿದೆ. ಅಲ್ಲದೇ, ಹೆಣ್ಣು ಮಕ್ಕಳಿಗೆ ಶೌಚಾಲಯ ಹಾಗೂ ಉಚಿತ ಸ್ಯಾನಿಟರಿ ಪ್ಯಾಡ್ ವ್ಯವಸ್ಥೆ ಕಲ್ಪಿಸಲು ಸರ್ಕಾರಗಳು ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದೆ.
ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 6ರಿಂದ 12ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಕೇಂದ್ರ ಸರ್ಕಾರ ಮುಟ್ಟಿನ ನೈರ್ಮಲ್ಯ ನೀತಿಯನ್ನು ಜಾರಿಗೆ ತರಬೇಕು ಎಂದು ಕೋರಿ ಜಯಾ ಠಾಕೂರ್ ಅವರು ಡಿಸೆಂಬರ್ 10, 2024ರಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ತೀರ್ಪನ್ನು ಕಾಯ್ದಿರಿಸಿದೆ.
ವರದಿ : ಲಾವಣ್ಯ ಅನಿಗೋಳ




