Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ ಬಗ್ಗೆ ವಿರೋಧ ಪಕ್ಷದವರು ರಾಜ್ಯ ಸರ್ಕಾರದ ವಿರುದ್ಧ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿ ಹಲವು ನಾಯಕರು ಕಾಂಗ್ರೆಸ್ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ.
ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ವ್ಯಂಗ್ಯವಾಡಿದ್ದು, ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ! ಒಬ್ಬ ಹಿರಿಯ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡದೇ ಇದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಗಡುವು ನೀಡುತ್ತಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿ ಎಂದಿದ್ದಾರೆ.
ಉತ್ತರ ಕರ್ನಾಟಕದಲ್ಲಿ ತೀವ್ರ ಅಭಾವವಿದ್ದರೂ, ಅಧಿಕಾರ ಹಾಗೂ ಕಮಿಷನ್ ದಂಧೆಯಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಕಣ್ಣೀರು ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಕೆ. ಪಾಟೀಲರೇ ಸಿಎಂ/ಡಿಸಿಎಂ ಆದೇಶವನ್ನು ಅಧಿಕಾರಿಗಳು ಧಿಕ್ಕರಿಸುತ್ತಿದ್ದಾರೆ, ಸರ್ಕಾರಕ್ಕೆ ಮಸಿ ಬಳಿಯುತ್ತಿದ್ದಾರೆ ಎಂದು ಬಹಿರಂಗವಾಗಿ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳ ಮಾತಿಗೂ ಬೆಲೆಯಿಲ್ಲ, ಸಚಿವರ ಆದೇಶಕ್ಕೂ ಬೆಲೆಯಿಲ್ಲ. ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕಡೆಗಣಿಸಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಕೈಗನ್ನಡಿ. ಅಧಿಕಾರಿಗಳ ಅಸಮರ್ಥತೆ, ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕದ ರೈತರು ಬೀದಿಗೆ ಬಿದ್ದಿದ್ದಾರೆ. ತಕ್ಷಣವೇ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಇಲ್ಲವೇ ಖುರ್ಚಿ ಖಾಲಿ ಮಾಡಿ ಎಂದು ಸುನೀಲ್ ಕುಮಾರ್ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.




