ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಮುಂದಾಗಿದೆ: ಸಿಎಂ ಡಿ.ಕೆ.ಶಿವಕುಮಾರ್

Bengaluru: “ನಮ್ಮ ಸರ್ಕಾರ ಈ ವರ್ಷದಿಂದ ಗ್ರಾಮೀಣ ಭಾಗದಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಯಾವ ಭಾಗದಿಂದ ಯಾವ ಪ್ರತಿಭೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿದ್ದಾರೆ ನಮಗೆ ಗೊತ್ತಿರುವುದಿಲ್ಲ. ನಮ್ಮ ಉಪಮುಖ್ಯಮಂತ್ರಿಗಳಾದ ಪರಮೇಶ್ವರ್ ಅವರು ಈ ಜವಾಬ್ದಾರಿ ವಹಿಸಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಏಷ್ಯಾ ಮಹಿಳಾ ಬಾಸ್ಕೆಟ್ ಬಾಲ್ ಲೀಗ್ 2026 ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ದೇಶಗಳ ತಂಡದ ಆಟಗಾರರಿಗೆ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಫಿಬಾ ಅವರು ಈ ಬಾಸ್ಕೆಟ್ ಬಾಲ್ ಪಂದ್ಯಾವಳಿಯನ್ನು ಆಯೋಜಿಸಲು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಧನ್ಯವಾದಗಳು. ನೀವು ಬೆಂಗಳೂರಿನ ಹವಾಮಾನ ಆನಂದಿಸುತ್ತಿದ್ದೀರಿ ಎಂದು ಭಾವಿಸಿದ್ದೇನೆ. ಒಲಿಂಪಿಕ್ಸ್ ಕ್ರೀಡಾಕೂಟ ಸಂದರ್ಭದಲ್ಲಿ ಹಲವು ಅಂತಾರಾಷ್ಟ್ರೀಯ ಆಟಗಾರರು ಬೆಂಗಳೂರಿಗೆ ಬಂದು ಅಭ್ಯಾಸ ಮಾಡುತ್ತಾರೆ” ಎಂದರು.

“ನೀವು ಇಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಸಂದೇಶ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದಕ್ಕಾಗಿ ಶ್ರಮಿಸಿರುವ ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಹಾಗೂ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಹಾಗೂ ಹಲವು ತಂಡಗಳ ಆಡಳಿತ ಮಂಡಳಿಗೆ ಅಭಿನಂದನೆಗಳು” ಎಂದು ಹೇಳಿದರು.

“ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳ ಸಾಧನೆ ಗಮನಾರ್ಹ. ಮುಂಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಷ್ಯಾದ ಕ್ರೀಡಾಪಟುಗಳು ಹೆಚ್ಚು ಸಾಧನೆ ಮಾಡುವ ವಿಶ್ವಾಸವಿದೆ. ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. ಇದರಿಂದ ಹೆಚ್ಚು ಕ್ರೀಡಾಪಟುಗಳು ಹೊರಹೊಮ್ಮುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

About The Author