ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದು ರಾಜ್ಯ ಸರ್ಕಾರದ ಕೆಲಸ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ. ಆದರೆ ರಾಜ್ಯ ಸರ್ಕಾರ ಮಾಡುವುದೆಲ್ಲವನ್ನೂ ಮಾಡಿಬಿಟ್ಟು ಈಗ ತನಗೇನೂ ಸಂಬಂಧವಿಲ್ಲ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ತಿವಿದಿದ್ದಾರೆ.
ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯ ಸರ್ಕಾರದ ತೆರಿಗೆ ಇಲಾಖೆ ಅಧಿಕಾರಿಗಳು. ಹೀಗಿದ್ದರೂ ಸಹ ಇದೀಗ ರಾಜ್ಯ ಸರ್ಕಾರಕ್ಕೂ, ಜಿಎಸ್‌ಟಿ ನೋಟಿಸ್‌ಗೂ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ಇವರು ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!
ಜಿಎಸ್ಟಿಯಯಲ್ಲಿ ಕೇಂದ್ರ ಸರ್ಕಾರದ ಅಧೀನದಲ್ಲಿ CGST ಹಾಗೂ SGST ಎಂಬ ಎರಡು ವಿಧಗಳಿವೆ. ಅದರಲ್ಲಿ ಕರ್ನಾಟಕದ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದ್ದಾರೆ.
ದೇಶದ ಬೇರೆಲ್ಲೂ ಇಲ್ಲದ ನೋಟಿಸ್ ಇಲ್ಲೇಕೆ? ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ, ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಾಸ್ಥರಿಗೆ ಜಿಎಸ್‌ಟಿ ನೋಟಿಸ್ ಕೊಟ್ಟಿಲ್ಲ. ಕರ್ನಾಟಕದಲ್ಲಿ ಮಾತ್ರ ಈ ರೀತಿ ಮಾಡಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಜತೆಗೆ ಸಣ್ಣ ವ್ಯಾಪಾರಸ್ಥರಿಗೂ ಕಿರುಕುಳ ನೀಡುತ್ತಿದೆ. ಬೆಲೆ ಏರಿಕೆ ಮಾಡಿ ಜನಸಾಮಾನ್ಯರು ಗೋಳಾಡುವಂತೆ ಮಾಡಿದ್ದಾರೆ. ಅಲ್ಲದೆ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಕಿರುಕುಳ ಕೊಡುತ್ತಿದೆ. ಈ ಮೂಲಕ ಯುಪಿಐ ವಹಿವಾಟು ಹದಗೆಡಿಸುವ ದುಸ್ಸಾಹಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಪ್ರಲ್ಹಾದ್ ಜೋಶಿ ಗುರುತರ ಆರೋಪ ಮಾಡಿದ್ದಾರೆ.
ದೇಶದ ಯುಪಿಐ ಬಳಕೆಯು ಇಡೀ ಜಗತ್ತಿಗೆ ಮಾದರಿಯಾಗಿದೆ, ಆದರೆ ರಾಜ್ಯದಲ್ಲಿ ಈ ಪಾರದರ್ಶಕ ವ್ಯವಸ್ಥೆಗೆ ಸಂಚಕಾರ ತರುವ ಯತ್ನಗಳು ನಡೆಯುತ್ತಿವೆ. ಈ ರೀತಿಯ ಕ್ಷುಲ್ಲಕ ರಾಜಕಾರಣ ನಿಜಕ್ಕೂ ದುರಂತವೇ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ.