ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 6 ಪಿಡಿಒಗಳನ್ನು ಅಮಾನತುಗೊಳಿಸುವ ಮೂಲಕ, ಜಿಲ್ಲಾಡಳಿತ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ವರದಿಯಾಗಿರುವ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ. ತಪ್ಪಿತಸ್ಥರನ್ನು ಅಮಾನತುಗೊಳಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ.87ರಲ್ಲಿ ವಜ್ರ ಇನ್‌ಫ್ರಾಸ್ಟ್ರಕ್ಟರ್ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಬಹುನಿವೇಶನಗಳ ವಿನ್ಯಾಸದ ಬಡಾವಣೆಯಲ್ಲಿ ಹಂಚಿಕೆಯಾಗಿರುವ 139 ನಿವೇಶನಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ. ಸಭಾ ನಿರ್ಣಯದ ವಿರುದ್ಧ ಇ-ಖಾತೆ ಮಾಡಲು ಪಿಡಿಒ ಅವಕಾಶ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಇ-ಸ್ವತ್ತು ತಂತ್ರಾಂಶದಲ್ಲಿ ಸದರಿ ಬಡಾವಣೆಯ ಖಾತೆಗಳನ್ನು ದಾಖಲಿಸಿ ವಿತರಣೆ ಮಾಡುವ ಮೂಲಕ ಕರ್ತವ್ಯ ಲೋಪವೆಸಗಿದ್ದಾರೆ ಎಂಬ ಆರೋಪದ ಮೇರೆಗೆ ಪಿಡಿಒ ಎಂ.ಕೆ. ಅನಿತಾ ರಾಜೇಶ್ವರಿ ಅವರನ್ನು ಏಪ್ರಿಲ್ ತಿಂಗಳಲ್ಲಿ ಸಿಇಒ ಕೆ.ಆರ್. ನಂದಿನಿ ಅಮಾನತುಗೊಳಿಸಿದ್ದರು. ಇ-ಸ್ವತ್ತು ವಿತರಣೆಯಲ್ಲಿ ಕರ್ತವ್ಯಲೋಪ ಎಸಗಿದ ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ವಿಶಾಲಮೂರ್ತಿ ಮತ್ತು ಹಾಲಿ ಪಿಡಿಒ ಯೋಗೇಶ್ ಇಬ್ಬರನ್ನು ಮೇ ತಿಂಗಳಲ್ಲಿ ಅಮಾನತುಗೊಳಿಸಲಾಗಿದೆ.
ಸಾರ್ವಜನಿಕರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಮುರುಕನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಸೈಯದ್ ಮುಜಾಕಿರ್ ಅವರನ್ನು ಆಗಸ್ಟ್‌ನಲ್ಲಿ ಅಮಾನತುಗೊಳಿಸಲಾಗಿತ್ತು. ನರೇಗಾದಡಿ ರಸ್ತೆ ಬದು ನೆಡು ತೋಪು ಯೋಜನೆಯಲ್ಲಿ ಕಾಮಗಾರಿ ನಡೆಸದೇ ಹಣ ಪಾವತಿಸಿರುವ ದೂರಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ತನಿಖಾ ತಂಡವನ್ನು ರಚಿಸಲಾಗಿದ್ದು, ಸದರಿ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಹಂತದ ಅಧಿಕಾರಿ, ಸಿಬ್ಬಂದಿ ಹಾಗೂ ಹೊಗುತ್ತಿಗೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸಿಇಒ ನಂದಿನಿ ತಿಳಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ