ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರಲ್ಲಿ ಅಂತಾರಾಜ್ಯ ಕಳ್ಳ ಚಿರಾಗ್ ರಾಠೋಡ್, ಸುನೀಲ್, ಮೊಹಮ್ಮದ್ ಯೂನಸ್ ಸೇರಿದಂತೆ ಇನ್ನೂ ಮೂವರು ಆರೋಪಿಗಳು ಸೇರಿದ್ದಾರೆ. ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಹೊನಗುಂಟಾ ಗ್ರಾಮದ ಪ್ರಸಿದ್ಧ ಚಂದ್ರಲಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಮೂಲದ ಅಂತಾರಾಜ್ಯ ಕಳ್ಳ ಚಿರಾಗ್ ರಾಠೋಡ್ನನ್ನು ಶಹಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಶಹಾಬಾದ್ ಪಟ್ಟಣದಲ್ಲಿ ದ್ವಿಚಕ್ರ ವಾಹನ ಕಳ್ಳತನ ನಡೆಸಿದ್ದ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಮೂರು ದ್ವಿಚಕ್ರ ವಾಹನಗಳು ಹಾಗೂ 90 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.
ಜೇವರ್ಗಿ ತಾಲೂಕಿನ S.N ಗುಡೂರು ಮತ್ತು ಇಜೇರಿ ಗ್ರಾಮಗಳಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳಲ್ಲಿಯೂ ಪೊಲೀಸರು ಯಶಸ್ಸು ಸಾಧಿಸಿದ್ದಾರೆ. ಗುಡೂರಿನಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದ ಸುನೀಲ್ ಎಂಬಾತನನ್ನು ಬಂಧಿಸಲಾಗಿದ್ದು, ಅವನಿಂದ 51 ಗ್ರಾಂ ಚಿನ್ನಾಭರಣ, 212 ಗ್ರಾಂ ಬೆಳ್ಳಿ ಆಭರಣ ಮತ್ತು 6 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
ಅದೇ ತಾಲೂಕಿನ ಮತ್ತೊಂದು ಪ್ರಕರಣದಲ್ಲಿ, ಸಂಬಂಧಿಕರ ಮನೆಗೆ ನುಗ್ಗಿ ಮುಖಕ್ಕೆ ಮಾಸ್ಕ್ ಧರಿಸಿ ಚಾಕು ತೋರಿಸಿ ಸುಲಿಗೆ ಮಾಡಿದ್ದ ಮೊಹಮ್ಮದ್ ಯೂನಸ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 16 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕಳ್ಳತನ ಪ್ರಕರಣಗಳ ತನಿಖೆಯನ್ನು ಮುಂದುವರೆಸಲಾಗುತ್ತಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವರದಿ : ಲಾವಣ್ಯ ಅನಿಗೋಳ




