ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ
ಮೈಸೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕ್ ಖರ್ಗೆ ಅವರಿಗೆ ಬಂದ ಬೆದರಿಕೆ ಕರೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕರೆ ಬಂದ ನಂಬರ್‌ಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು. ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಪ್ರಕರಣಗಳು ನಿಲ್ಲಬೇಕಾದರೆ ಕಠಿಣ ಕ್ರಮ ಅನಿವಾರ್ಯ ಎಂದು ಪರಮೇಶ್ವರ್ ಹೇಳಿದರು.
ಆರ್‌ಎಸ್‌ಎಸ್ ಶಾಖೆಗಳ ನಿಷೇಧ ಕುರಿತಂತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ತಮ್ಮ ಅಭಿಪ್ರಾಯವನ್ನು ಪತ್ರದ ಮೂಲಕ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ನಿರ್ಧಾರ ಕೈಗೊಳ್ಳುವುದು ಮುಖ್ಯಮಂತ್ರಿ ಅವರ ಅಧಿಕಾರ ಎಂದು ಸ್ಪಷ್ಟಪಡಿಸಿದರು.
ವಿಪಕ್ಷ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪದ ಕುರಿತೂ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಸಮಾನವಾಗಿ ಅನುದಾನ ನೀಡಲಾಗುತ್ತಿದೆ. ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ, ವಿಪಕ್ಷ ಶಾಸಕರಿಗೂ ತಲಾ 25 ಕೋಟಿ ಅನುದಾನ ನೀಡಲಾಗಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ನಮಗೆ ಕೇವಲ 5 ಕೋಟಿ ಮಾತ್ರ ನೀಡಿದ್ದರು ಎಂಬುದನ್ನು ಮರೆಯಬಾರದು. ಆದರೂ ನಾವು ಯಾರ ಮೇಲೂ ತಾರತಮ್ಯ ತೋರಿಲ್ಲ. ಲೋಕೋಪಯೋಗಿ ಇಲಾಖೆ ಸೇರಿದಂತೆ ಹಂತ ಹಂತವಾಗಿ ಎಲ್ಲರಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿಯವರು ನವೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಕ್ರಾಂತಿ ಸಂಭವಿಸುತ್ತದೆ ಎಂದು ಹೇಳುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿ, ಅದು ಅವರ ಜಪ ಮಾತ್ರ. ನಮ್ಮಲ್ಲಿ ಯಾವುದೇ ಅಸಾಮಾನ್ಯ ಬೆಳವಣಿಗೆಗಳಿಲ್ಲ. ಅವರು ಹೇಳಿಕೊಳ್ಳಲಿ ಎಂದು ಪರಮೇಶ್ವರ್ ವ್ಯಂಗ್ಯವಾಗಿ ಹೇಳಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ