ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಜೂನ್ 10ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಕಲಬುರಗಿ, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿ ಸಹಿತ ಗುಡುಗು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಒಟ್ಟಾರೆ, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ರೈತರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ.

 

About The Author