ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿರುವುದು ಸಂಚಲನಕ್ಕೆ ಕಾರಣವಾಗಿದೆ.
ಮಂಡ್ಯದಲ್ಲಿ ಮಾತನಾಡಿರುವ ಅವರು, ಕಾಲ ಕೂಡಿ ಬಂದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು. ಅವರು ಆಗೇ ಆಗುತ್ತಾರೆ ಎಂದು ಒತ್ತಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇನ್ನೂ ಎಲ್ಲ ಶಾಸಕರು ಡಿಕೆ ಶಿವಕುಮಾರ್ ಪರ ಇದ್ದಾರೆ. ಗ್ಯಾರಂಟಿಯಿಂದ ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ನಮಗೆ ನೂರಾರು ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಜಿಲ್ಲೆಯ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ವಿಚಾರದಲ್ಲಿ ನಾನೇನು ಹೇಳಲಿ? ಕೆಆರ್ ಪೇಟೆ ಶಾಸಕರು ನಮ್ಮ ಪಕ್ಷದವರಾ..? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಸಮಯ ಬಂದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. 138 ಶಾಸಕರು ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ಪರವಾಗಿದ್ದಾರೆ. ಕಾಲ ಕೂಡಿ ಬಂದಾಗ ಅವರು ಕೂಡ ಸಿಎಂ ಆಗುತ್ತಾರೆ. ಸಮಯ ಮತ್ತು ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು, ಅವರು ಸಿಎಂ ಆಗುತ್ತಾರೆ ಎಂದು ಶಾಸಕ ಗಣಿಗ ಪುನರುಚ್ಚರಿಸಿದ್ದಾರೆ.
ಅಲ್ಲದೆ ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇನ್ನೂ ಸಿಎಂ ಕುರ್ಚಿಗಾಗಿ, ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಿದೆ. ಸಿಎಂ, ಡಿಸಿಎಂ ಇಬ್ಬರೂ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ತಮಗೆ ಹೆಚ್ಚಿನ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಹಣ ಮತ್ತು ಅಧಿಕಾರದ ಮೂಲಕ ಶಾಸಕರ ಬೆಂಬಲ ಪಡೆಯಲು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ ಅವರಿಗೆ ಸಂಪೂರ್ಣ ಜನಾದೇಶವಿರುವುದರಿಂದ ಅವರು 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಬೇಕು ಎಂಬುದು ನಮ್ಮ ಉದ್ದೇಶ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕುದುರೆಗಳು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ಧವಾಗಿವೆ, ಮತ್ತು ಖರೀದಿದಾರರು ಸಹ ಸಿದ್ಧರಾಗಿದ್ದಾರೆ. ಈ ಹಿಂದೆ ನಮಗೆ 9 ಸ್ಥಾನಗಳ ಕೊರತೆ ಇತ್ತು ಆದರೆ ನಾವು ಏಕೈಕ ಅತಿದೊಡ್ಡ ಪಕ್ಷವಾಗಿದ್ದೆವು ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಜನಾದೇಶ ನಮ್ಮೊಂದಿಗಿತ್ತು. ಈಗ ಅವರಿಗೆ ಜನಾದೇಶ ಸಿಕ್ಕಿದೆ. ಯಾವುದೇ ಸಮಸ್ಯೆಯಿಲ್ಲದೆ ಸರ್ಕಾರ ನಡೆಸಬೇಕು. ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ. ಈಗ, ಶಾಸಕರ ಬೆಂಬಲ ಪಡೆದವರೇ ಸಿಎಂ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಛೇಡಿಸಿದ್ದಾರೆ.
ಇದಲ್ಲದೆ, ತನ್ವೀರ್ ಸೇಠ್ ಮತ್ತು ಇಕ್ಬಾಲ್ ಹುಸೇನ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಶಾಸಕರು ಡಿಕೆ ಶಿವಕುಮಾರ್ ಅವರನ್ನು ಸಾರ್ವಜನಿಕವಾಗಿ ಬೆಂಬಲಿಸಿದ್ದು, ಇನ್ನಷ್ಟು ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ಪುನಾರಚನೆಯ ಮಾತುಕತೆಗಳನ್ನು ತಳ್ಳಿಹಾಕಿದ್ದರೂ, ಆಂತರಿಕ ಚಟುವಟಿಕೆಗಳು ನಡೆಯುತ್ತಿವೆ. ಕೆಲವು ಸಚಿವರ ಕಾರ್ಯಕ್ಷಮತೆ ಮತ್ತು ಭ್ರಷ್ಟಾಚಾರದ ಪರಿಶೀಲನೆಗೆ ಒಳಪಟ್ಟಿವೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆಯ ಲಕ್ಷಣಗಳು ಕಂಡುಬರುತ್ತಿಲ್ಲ.