Sunday, September 8, 2024

Latest Posts

ಹಿರಿಯ ಸಾಹಿತಿ “ಚಂಪಾ” ನಿಧನ..!

- Advertisement -

ಬೆಂಗಳೂರು : ಹಿರಿಯ ಸಾಹಿತಿ ‘ಚಂದ್ರಶೇಖರ ಪಾಟೀಲರು’ ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದರು. ಎಂ,ಎ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿದರು ಹಾಗೂ ಇಂಗ್ಲೆಂಡ್ ನ ವಿಶ್ವವಿದ್ಯಾಲಯದ ಭಾಷಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದ್ ನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೋಮಾ ಸಹ ಪಡೆದಿದ್ದರು. ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿರುವಾಗಲೇ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗಿದ್ದರು.

ಕವಿಯಾಗಿ, ನಾಟಕಕಾರರಾಗಿ, ಸಂಘಟನಾಕಾರರಾಗಿ, ಪತ್ರಿಕಾ ಸಂಪಾದಕರಾಗಿ, ಕನ್ನಡ ಹೋರಾಟಗಾರರಾಗಿ ಅಪಾರವಾದ ಸೇವೆಯನ್ನು ಸಲ್ಲಿಸಿದ್ದರು. ಇವರಿಗೆ ಸಂದ ಪ್ರಶಸ್ತಿಗಳೆಂದರೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ ವಿ ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ ಮಾಧ್ಯಮ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಲಭಿಸಿವೆ. 2017ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2018ರಲ್ಲಿ ಇವರಿಗೆ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರ ಪ್ರಮುಖ ಗೀತೆಗಳಲ್ಲಿ ಒಂದಾದ ಸಿ ಅಶ್ವಥ್ ಅವರ ಧ್ವನಿಯಲ್ಲಿ ಮೂಡಿಬಂದಿರುವ “ಗುಪ್ತಗಾಮಿನಿ ನನ್ನ ಶಾಲ್ಮಲಾ “ಕನ್ನಡಿಗರ ಮನೆ ಮನೆಯಲ್ಲಿ ಜನಪ್ರಿಯವಾದ ಹಾಡಾಗಿದೆ. ಇನ್ನು ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿರುವ ಗಾಯತ್ರಿ ಲೇಔಟ್ ಗೆ ರವಾನೆ ಮಾಡಲಾಗಿದ್ದು ಇಂದು ಸಂಜೆ ಕೆಂಗೇರಿ ಬಳಿಯ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಇನ್ನು ಇವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ್ ಜೋಶಿ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಮನು ಬಳಿಗಾರ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ ಇನ್ನೂ ಹಲವಾರು ಗಣ್ಯರು ಇವರ ಅಗಲಿಕೆಗೆ ಸಂತಾಪವನ್ನು ಸೂಚಿಸಿದೆ.

- Advertisement -

Latest Posts

Don't Miss