ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.
ಮಲಪ್ರಭಾ ನದಿಯಿಂದ ‘ಜಲ ಜೀವನ ಮಿಷನ್’ (JJM) ಅಡಿಯಲ್ಲಿ ನೀರು ಪೂರೈಕೆಯಾಗಬೇಕಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾಗಿ ಸರಬರಾಜು ಆಗುತ್ತಿಲ್ಲ, ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಹಲವು ದಿನಗಳಿಂದ 20 ದಿನಕ್ಕೊಮ್ಮೆ ಮಾತ್ರ ನೀರು ಬಿಡಲಾಗುತ್ತಿದ್ದು, ಅದು ಕೂಡ ಕಲುಷಿತವಾಗಿದೆ. ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶುದ್ಧ ನೀರನ್ನು ಸೇವಿಸುವುದರಿಂದ ಗ್ರಾಮದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಸಂಕಷ್ಟ ಎದುರಿಸುವಂತಾಗಿದೆ. ನೀರಿನ ಕೊರತೆಯಿಂದ ಜಾನುವಾರುಗಳಿಗೂ ಕುಡಿಯಲು ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಇದೇ ಕಾರಣಕ್ಕೆ ಜಾನುವಾರುಗಳನ್ನು ಪಂಚಾಯತ್ ಕಚೇರಿಯ ಆವರಣಕ್ಕೆ ಕರೆತಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕ ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸಲು ಅಧಿಕಾರಿಗಳು ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಬನಹಟ್ಟಿ ಹಾಗೂ ಮೂಗನೂರು ಗ್ರಾಮಸ್ಥರು ಒಟ್ಟಾಗಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪಂಚಾಯತ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಶೀಘ್ರವಾಗಿ ನೀರಿನ ವ್ಯವಸ್ಥೆ ಮಾಡದಿದ್ದರೆ ತಾಲೂಕು ಕಚೇರಿ ಮುಂಭಾಗ ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಿಂದ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶೀಘ್ರ ಪರಿಹಾರ ನೀಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ನೀರಿನ ತೀವ್ರ ಕೊರತೆಯಿಂದ ಬನಹಟ್ಟಿ ಗ್ರಾಮದಲ್ಲಿ ಜನರ ಆಕ್ರೋಶ ಹೆಚ್ಚಾಗಿದೆ.




