ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. 2023ರಿಂದ 2025ರ ಜುಲೈವರೆಗೆ ಒಟ್ಟು 43,053 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಇಲಾಖೆಯ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳದಿಂದ ಹಲವರು ಸಾವನ್ನಪ್ಪಿದ್ದಾರೆ. ಗಂಡನಿಂದ ಕಿರುಕುಳ, ಪೋಕ್ಸೋ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಕೃತ್ಯಗಳು, ಮಕ್ಕಳ ರಕ್ಷಣೆ ಮತ್ತು ಆರೈಕೆ ಹೀಗೆ ಜೆ.ಜೆ. ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲಾಗಿದೆ. ಲೈಂಗಿಕ ಕಿರುಕುಳ – 16,273 ಪ್ರಕರಣಗಳು, ವರದಕ್ಷಿಣೆ ಕಿರುಕುಳ – 5,456 ಪ್ರಕರಣಗಳು, ಗಂಡನ ಕಿರುಕುಳ – 7,546 ಪ್ರಕರಣಗಳು ದಾಖಲಾಗಿದ್ದು, ವರದಕ್ಷಿಣೆ ಕಿರುಕುಳದಿಂದಲೇ 340 ಗೃಹಿಣಿಯರು ಸಾವನ್ನಪ್ಪಿದ್ದಾರೆ.
ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. 2023ರಲ್ಲಿ 600, 2024ರಲ್ಲಿ 739 ಹಾಗೂ 2025ರ ಜುಲೈವರೆಗೆ 549 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರಲ್ಲಿ 3,902, 2024ರಲ್ಲಿ 4,064 ಹಾಗೂ 2025ರ ಜುಲೈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಸದ್ಯ ಈ ಅಂಕಿಅಂಶಗಳು ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಚಿಂತೆ ಎಬ್ಬಿಸುತ್ತಿವೆ.
ಬಡತನ, ಅನಕ್ಷರತೆ ಹಾಗೂ ಕಾನೂನಿನ ಕುರಿತು ಸಮರ್ಪಕ ಮಾಹಿತಿ ಇಲ್ಲದಿರುವುದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಲು ಮಹಿಳಾ ಆಯೋಗವು ಪೊಲೀಸ್ ಇಲಾಖೆಯ ಸಹಕಾರದಿಂದ ಕಾರ್ಯನಿರ್ವಹಿಸುತ್ತಿದೆ, ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ತ್ವರಿತ ನ್ಯಾಯಾಲಯಗಳ ಮೂಲಕ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವುದರಿಂದ ಸಂತ್ರಸ್ತರಿಗೆ ನ್ಯಾಯ ಒದಗಿಸಬಹುದಾಗಿದೆ ಎಂದು ಹೇಳಿದರು.