www.karnatakatv.net : ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 2 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಜಯ ಸಾಧಿಸಿತ್ತು. ಹೀಗೆ ಲಾರ್ಡ್ಸ್ ಅಂಗಳದಲ್ಲಿ 7 ವರ್ಷಗಳ ಬಳಿಕ ಗೆದ್ದು ಮೈಲಿಗಲ್ಲು ನೆಟ್ಟ ಇಂಡಿಯಾದ ಗೆಲುವಿನ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಪ್ರಮುಖ ಕೋಚ್ ಕ್ರಿಸ್ ಸಿಲ್ವರ್‌ವುಡ್ ಭಾರತದ ಈ ಪುಟ್ಟ ಗೆಲುವಿಗೆಲ್ಲಾ ನಾವು ಹೆದರುವವರಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಲಾರ್ಡ್ಸ್ ಅಂಗಳದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ 364 ರನ್‌ಗಳಿಗೆ ಆಲ್ ಔಟ್ ಆಯಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಜೋ ರೂಟ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ 391 ರನ್ ಗಳಿಸುವುದರ ಮೂಲಕ ಮೊದಲನೇ ಇನ್ನಿಂಗ್ಸ್‌ನಲ್ಲಿ 27 ರನ್‌ಗಳ ಲೀಡ್ ಪಡೆದುಕೊಂಡಿತ್ತು.

