National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
13174 ಸಂಖ್ಯೆಯ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಸಿಯಾಲ್ಡಹ್‌ಗೆ ತೆರಳುತ್ತಿತ್ತು. ಅಗರ್ತಲಾದಿಂದ ಸೀಲ್ಡಾಗೆ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದಾಗ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿವೆ. ಗೂಡ್ಸ್ ರೈಲು ಸಿಗ್ನಲ್ ಅನ್ನು ಜಂಪ್ ಮಾಡಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಹಿಂಭಾಗದ ಪಾರ್ಸೆಲ್ ಬೋಗಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ದುರಂತ ಯಾಕೆ ಸಂಭವಿಸಿತು ಎನ್ನುವುದನ್ನು ಕಂಡುಕೊಳ್ಳಲು ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಗೂಡ್ಸ್ ರೈಲಿನ ಲೋಕೋ ಪೈಲಟ್ ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಗಾರ್ಡ್ ಕೂಡ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೈಲುಗಳ ಅಡಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಮೃತಪಟ್ಟ ಶರೀರಗಳನ್ನು ಸರ್ಕಾರಿಗೆ ಸಾಗಿಸಲಾಗಿದೆ. ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಲಾಗಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತರ ಸಂಬಂಧಿಕರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ.
ಅಪಘಾತದ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ದುರಂತದ ಸುದ್ದಿ ಕೇಳಿ ಆಘಾತವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಮಾತುಕಡೆ ನಡೆಸಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಪಘಾತದಲ್ಲಿ ಮೃತವರಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತಿತರರು ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮಮತಾ ಬ್ಯಾನರ್ಜಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.