ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ.

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಈ ಕೊಲೆಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ 2020ರ ನವೆಂಬರ 5ರಂದು ಸಿಬಿಐ ಅಧಿಕಾರಿಗಳು ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ವಿನಯ್‌ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ಸದ್ಯ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಏ.9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ತಾಂತ್ರಿಕ ಕಾರಣಗಳು ಹಾಗೂ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಏ.15ಕ್ಕೆ ಮೂಂದೂಡಿತ್ತು. ಇದೀಗ ನ್ಯಾಯಾಯಲಯವು ತೀರ್ಪು ಪ್ರಕಟಿಸುವುದರಿಂದ ಆರೋಪಿಗಳಲ್ಲಿ ಆತಂಕ ಶುರುವಾಗಿದೆ.

ವರದಿ : ಲಾವಣ್ಯ ಅನಿಗೋಳ

 

About The Author