ಜನರನ್ನು ಕಚೇರಿಗಳಲ್ಲಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲೇ ಕುಳಿತುಕೊಳ್ಳದೆ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಕೇಳಿ ತಕ್ಷಣ ಪರಿಹರಿಸಿ. ಸೂಚನೆ ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸೂಚಿಸಿದರು.
ಮೈಸೂರು ಜಿಲ್ಲೆಯ ಶಿಕ್ಷಣ ಸೂಚ್ಯಂಕದಲ್ಲಿ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಶಿಕ್ಷಣಕ್ಕೆ ಪ್ರಸಿದ್ಧವಾದ ಜಿಲ್ಲೆ. ಇಂತಹ ಕುಸಿತ ಅಸ್ವೀಕಾರ್ಯ, ಪರಿಸ್ಥಿತಿ ತಕ್ಷಣ ಸುಧಾರಿಸಬೇಕು ಎಂದರು.
ಅವರು ಮತ್ತಷ್ಟು ಕಳವಳ ವ್ಯಕ್ತಪಡಿಸಿ, ಮೈಸೂರಿನ ಜನರು ಸಮಸ್ಯೆ ಹೇಳಿಕೊಳ್ಳಲು ಬೆಂಗಳೂರಿಗೆ ಬರುವಂತ ಪರಿಸ್ಥಿತಿ ಬೇಡ. ಸ್ಥಳೀಯ ಅಧಿಕಾರಿಗಳು ಜನರ ಅಹವಾಲು ಕೇಳಿ ಬಗೆಹರಿಸಬೇಕು ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




