ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವಿನ ಪ್ರಾಸಿಕ್ಯೂಷನ್ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಷಡ್ಯಂತ್ರವನ್ನು ಬಿಜೆಪಿ-ಜೆಡಿಎಸ್ ಪಕ್ಷಗಳು ನಡೆಸುತ್ತಿವೆ. ಒಂದುವೇಳೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಇದೇ ರೀತಿ ಮುಂದುವರಿದರೆ ರಾಜ್ಯಪಾಲರ ಮುಂದೆ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ಪರೇಡ್ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ರಾಜಕೀಯ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿವೆ. ಇದು ಹೀಗೆಯೇ ಮುಂದುವರಿದರೆ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲು ಸಚಿವರು ಮತ್ತು ಶಾಸಕರು ಪರೇಡ್ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಪರಿಣಾಮಕಾರಿ ಕಾರ್ಯವೈಖರಿಯನ್ನು ಅರಗಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ಗೆ ಆಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯತ್ನಿಸುತ್ತಿವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.