ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹು ನಿರೀಕ್ಷಿತ ಬಡ್ತಿ ಭಾಗ್ಯ ಶೀಘ್ರದಲ್ಲೇ ಲಭ್ಯವಾಗಲಿದೆ ಹೀಗಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ₹30,000 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ಕೊಡ್ತಿದ್ದೇವೆ. ಈ ಎಲ್ಲ ಯೋಜನೆಗಳನ್ನು ಸಮುದಾಯದಮಟ್ಟಕ್ಕೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದು. ಅಂಗನವಾಡಿ ಕಾರ್ಯಕರ್ತೆಯರು ಸಮಾಜದಲ್ಲಿ ತಾಯಿಯ ಸ್ಥಾನದಂತೆ ದುಡಿಯುತ್ತಿದ್ದಾರೆ.
ಅವರ ಸೇವೆಗೆ ಗೌರವ ಸೂಚಿಸುವ ದೃಷ್ಟಿಯಿಂದ 400 ಮಂದಿಗೆ ಸೂಪರ್ವೈಸರ್ ಹುದ್ದೆಗೆ ಬಡ್ತಿ ನೀಡಲಾಗುತ್ತಿದೆ. ಈಗಿರುವ ಸೂಪರ್ವೈಸರ್‌ಗಳಿಗೆ ಅಸಿಸ್ಟೆಂಟ್ ಸಿಡಿಒ ಹುದ್ದೆಗಾಗಿ ಬಡ್ತಿ ನೀಡಲು ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಪೋಷಣ್ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಅಪೌಷ್ಟಿಕ ಮಕ್ಕಳನ್ನು ಪೌಷ್ಟಿಕತೆಯಿಂದ ಸಮೃದ್ಧಗೊಳಿಸಿ, ಸುಬಲ ಭಾರತ ನಿರ್ಮಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ನಮ್ಮ ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಸಚಿವೆ ಸ್ಪಷ್ಟಪಡಿಸಿದರು.
ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ನಾವು ಶ್ರಮಿಸುತ್ತಿದ್ದೇವೆ. ಇಂತಹ ಗ್ರಾಮ ಪಂಚಾಯಿತಿಗೆ ₹25,000 ಬಹುಮಾನ ನೀಡಲಾಗುತ್ತದೆ. ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯರ ಮೇಲಿನ ಹಿಂಸಾಚಾರ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ದೂರು ನೀಡಲು ನೇರವಾಗಿ ನನ್ನನ್ನು ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.
ವರದಿ : ಲಾವಣ್ಯ ಅನಿಗೋಳ