Thursday, October 30, 2025

Latest Posts

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

- Advertisement -

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ ಕಾಣಿಸಿಕೊಂಡಿದೆ. ಹವಾಮಾನ ಇಲಾಖೆ ಪ್ರಕಾರ, ಇಂದಿನಿಂದ ಮುಂದಿನ ಐದು ದಿನಗಳು ಅಂದರೆ ನವೆಂಬರ್ 3ರವರೆಗೆ ರಾಜ್ಯದ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಗುಡುಗು–ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ. ನಾಳೆಯಿಂದ ಈ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೀಗೇ ಕ್ರಮೇಣ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವ ನಿಧಾನವಾಗಿ ಕಡಿಮೆಯಾಗುತ್ತಿದೆ. ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಟ್ಟದ ಮಳೆ ನಿರೀಕ್ಷಿಸಲಾಗಿದೆ. ಇದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಬಿಸಿಲಿನ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗಬಹುದು.

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ. ಸಂಜೆ ವೇಳೆಗೆ ಮಬ್ಬು ಕವಿದ ವಾತಾವರಣ ಕಂಡುಬರಬಹುದು. ಆದರೆ ಯಾವುದೇ ಗಂಭೀರ ಹವಾಮಾನ ಬದಲಾವಣೆ ಸಂಭವಿಸುವ ಲಕ್ಷಣಗಳು ಇಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss