NEET ಹಗರಣ ಖಂಡಿಸಿ ಹಾವೇರಿಯಲ್ಲಿ ರಸ್ತೆಗಿಳಿದ ಕಾರ್ಯಕರ್ತರು.

ಹಾವೇರಿ ನಗರದ ಪಿ.ಬಿ ರಸ್ತೆಯಲ್ಲಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಚೇರಿ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ʼವಿದ್ಯಾರ್ಥಿಗಳ ಕನಸುಗಳ ಜೊತೆ ಆಟವಾಡಬೇಡಿʼ, ʼಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ಬರಲಿʼ ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಮತ್ತು ಪರೀಕ್ಷಾ ಸಂಸ್ಥೆಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಯೂತ್ ಕಾಂಗ್ರೆಸ್ ಮುಖಂಡರು ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಯಾದ ನೀಟ್‌ನಲ್ಲಿ ಪರೀಕ್ಷೆಯಲ್ಲಿ ನಡೆಯುತ್ತಿರುವ ಅಕ್ರಮಗಳು ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಂದಿಸುತ್ತಿವೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಸ್ಪಷ್ಟನೆ ನೀಡಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಭದ್ರತೆ ವಹಿಸಿದ್ದರು.

About The Author