ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ

ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50,000 ರಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶುಕ್ರವಾರ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಕೇವಲ ಕಾನೂನು ಸಮಸ್ಯೆಯಲ್ಲ, ಅದು ಗಂಭೀರ ಸಾಮಾಜಿಕ ಸಮಸ್ಯೆಯೂ ಹೌದು ಎಂದು ಹೇಳಿದರು.

ಪ್ರಸಕ್ತ ರಾಜ್ಯದಲ್ಲಿ 1000 ಪುರುಷರಿಗೆ 947 ಸ್ತ್ರೀಯರಷ್ಟೇ ಅನುಪಾತವಿದ್ದು, ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಸಾಮಾಜಿಕ ಅಸಮತೋಲನ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಭ್ರೂಣ ಲಿಂಗ ಪತ್ತೆ ಪ್ರಕರಣಗಳಲ್ಲಿ ಗುಪ್ತ ಕಾರ್ಯಾಚರಣೆ ಯಶಸ್ವಿಯಾಗಲು ಸಹಕರಿಸಿದವರಿಗೆ ಬಹುಮಾನ ನೀಡಲಾಗುತ್ತಿದೆ. ಜನರು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಭ್ರೂಣ ಹತ್ಯೆ ತಡೆಯುವಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಸಚಿವರು, ಹೆಣ್ಣುಮಕ್ಕಳ ಆರೋಗ್ಯ ಹಾಗೂ ರಕ್ಷಣೆಗೆ ಆರೋಗ್ಯ ಇಲಾಖೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
‘ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ ಯೋಜನೆಯು ಹೆಣ್ಣುಮಕ್ಕಳಲ್ಲಿ ರಕ್ತಹೀನತೆ ನಿವಾರಣೆಗೆ ಪ್ರಮುಖ ಯೋಜನೆಯಾಗಿದೆ ಎಂದು ಹೇಳಿದರು.

ವರದಿ : ಲಾವಣ್ಯ ಅನಿಗೋಳ

About The Author